ವಿಷಯಕ್ಕೆ ಹೋಗು

ವಿಕಿಪೀಡಿಯ:ವಿಶೇಷ ಬರಹ/ಸಂಚಿಕೆ - ೨೦

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಕರ್ನಾಟಕ ರತ್ನ, ಪದ್ಮಭೂಷಣ ಡಾ. ರಾಜ್‍ಕುಮಾರ್
ಕರ್ನಾಟಕ ರತ್ನ, ಪದ್ಮಭೂಷಣ ಡಾ. ರಾಜ್‍ಕುಮಾರ್

ನಟಸಾರ್ವಭೌಮ ಡಾ. ರಾಜ್‍ಕುಮಾರ್ (ಜನನ: ೨೪ ಏಪ್ರಿಲ್ ೧೯೨೯ - ಮರಣ: ೧೨ ಏಪ್ರಿಲ್ ೨೦೦೬) ಕನ್ನಡ ಚಿತ್ರರಂಗದ ಧ್ರುವತಾರೆ ಎಂದೇ ಹೆಸರಾದ ಪ್ರಸಿದ್ಧ ನಟ, ಗಾಯಕ. ಸುಮಾರು ಐದು ದಶಕಗಳಲ್ಲಿನ ಚಿತ್ರರಂಗದ ಬದುಕಿನಲ್ಲಿ, ೨೦೦ ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ ಡಾ. ರಾಜ್ ಕರ್ನಾಟಕದ ಅತ್ಯಂತ ಜನಪ್ರಿಯ ವ್ಯಕ್ತಿಗಳಲ್ಲಿ ಪ್ರಮುಖರು. ಕೇವಲ ನಟರಾಗಿ ಉಳಿಯದೆ ಹಿನ್ನೆಲೆ ಗಾಯಕರಾಗಿ ಸಹ ಹೆಸರು ಮಾಡಿದ್ದಾರೆ. ನಟಸಾರ್ವಭೌಮ ಬಿರುದು ಮತ್ತು ಮೈಸೂರು ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ. ಭಾರತ ಸರ್ಕಾರದಿಂದ ಪ್ರತಿಷ್ಠಿತ ಪದ್ಮಭೂಷಣ ಪ್ರಶಸ್ತಿ ಮತ್ತು ಚಿತ್ರರಂಗದಲ್ಲಿನ ಜೀವಮಾನದ ಸಾಧನೆಗಾಗಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗಳು ಸಹ ಲಭಿಸಿವೆ. ಕರ್ನಾಟಕ ಸರ್ಕಾರದಿಂದ ಕರ್ನಾಟಕ ರತ್ನ ಎಂದು ಪುರಸ್ಕೃತರಾದವರು.

ಬೇಡರ ಕಣ್ಣಪ್ಪ ಚಿತ್ರದಲ್ಲಿ ನಾಯಕನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಡಾ.ರಾಜ್ ಅವರ ಕೊನೆಯ ಚಿತ್ರ ಶಬ್ದವೇದಿ. ಭಕ್ತಿಪ್ರಧಾನ ಚಿತ್ರಗಳಾದ ಭಕ್ತ ಕುಂಬಾರ, ಸಂತ ತುಕಾರಾಮ, ಭಕ್ತ ಚೇತ, ಐತಿಹಾಸಿಕ ಚಿತ್ರಗಳಾದ ಮಯೂರ, ಶ್ರೀಕೃಷ್ಣದೇವರಾಯ, ರಣಧೀರ ಕಂಠೀರವ, ಪೌರಾಣಿಕ ಚಿತ್ರಗಳಾದ, ಶ್ರೀಕೃಷ್ಣಗಾರುಡಿ, ಬಭ್ರುವಾಹನ ಹಾಗು ಸಾಮಾಜಿಕ ಚಿತ್ರಗಳಾದ ಹಾಲುಜೇನು, ಹೊಸಬೆಳಕು, ದೇವತಾ ಮನುಷ್ಯ, ಜೀವನಚೈತ್ರ, ಆಕಸ್ಮಿಕ ಇತ್ಯಾದಿ ಚಿತ್ರಗಳು ರಾಜ್ ಅಭಿನಯದ ಪ್ರಮುಖ ಚಿತ್ರಗಳು.

ಜೀವನಚೈತ್ರ ಚಿತ್ರದಲ್ಲಿನ ನಾದಮಯ ಈ ಲೋಕವೆಲ್ಲಾ ಹಾಡಿನ ಗಾಯನಕ್ಕೆ ರಾಷ್ಟ್ರಪ್ರಶಸ್ಸ್ತಿಯನ್ನು ಪಡೆದರು. ೧೯೮೧ರಲ್ಲಿ ನಡೆದ ಗೋಕಾಕ್ ಚಳುವಳಿಯ ನೇತೃತ್ವ ವಹಿಸಿದ್ದ ಡಾ.ರಾಜ್, ಕನ್ನಡ ಚಿತ್ರಗಳಷ್ಟೆ ಹೊರತು ಬೇರಾವುದೇ ಭಾಷೆಯ ಚಿತ್ರಗಳಲ್ಲಿ ಅಭಿನಯಿಸಲಿಲ್ಲ.

೨೦೦೦ನೇ ವರ್ಷದಲ್ಲಿ ಕುಖ್ಯಾತ ದಂತಚೋರ ವೀರಪ್ಪನ್‍ನಿಂದ ಅಪಹರಣವಾಗಿದ್ದ ರಾಜ್‍ಕುಮಾರ್ ೧೦೮ ದಿನಗಳ ನಂತರ ಬಿಡುಗಡೆಯಾಗಿದ್ದರು. ೨೦೦೬ ಏಪ್ರಿಲ್ ೧೨ರಂದು ಬೆಂಗಳೂರಿನಲ್ಲಿ, ಹೃದಯಾಘಾತದಿಂದ ಮರಣ ಹೊಂದಿದರು. ರಾಜ್ ಅವರ ಸ್ವ-ಇಚ್ಛೆಯಂತೆ, ಮರಣದ ನಂತರ ಅವರ ಕಣ್ಣುಗಳನ್ನು ದಾನ ಮಾಡಲಾಯಿತು.